Web Analytics Made Easy - Statcounter

See also ebooksgratis.com: no banners, no cookies, totally FREE.

CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಯುಗಾದಿ - Wikipedia

ಯುಗಾದಿ

From Wikipedia

ಯುಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. "ಯುಗಾದಿ" ಪದದ ವ್ಯುತ್ಪತ್ತಿ "ಯುಗ+ಆದಿ" - ಹೊಸ ಯುಗದ ಆರಂಭ, ಎಂದು.

ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ "ಬೇವು-ಬೆಲ್ಲ." ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ.

ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ. ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.

ಭೂಮಿಯಿಂದ ನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ - ಅಂದರೆ ಮೇಷ ರಾಶಿಯ ೦ - ೧೩:೨೦ ಭಾಗ(ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು. ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದು ಏಪ್ರಿಲ್ ೧೪ ಅಥವಾ ೧೫ ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ. ರವಿಚಂದ್ರರ ಗತಿಯನ್ನವಲಂಬಿಸಿ, ೧೧ ರಿಂದ ೧೩ ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಶುಭಾಶಯ ಕೋರುವ ಶುಭಾಶಯ ಪತ್ರ
ಯುಗಾದಿ ಶುಭಾಶಯ ಕೋರುವ ಶುಭಾಶಯ ಪತ್ರ

[ಬದಲಾಯಿಸಿ] ಪುರಾಣ

ಪುರಾಣದ ಪ್ರಕಾರ ಬ್ರಹ್ಮ ದೇವ ಯುಗಾದಿಯ ದಿನದಿಂದ ಅಂದರೆ ಚೈತ್ರ ಶುದ್ಧದ ದಿನ ಲೋಕದ ಸೃಷ್ಟಿ ಪ್ರಾರಂಭಿಸಿದಂತೆ. ಹಿಂದು ಜನಾಂಗಕ್ಕೆ ಯುಗಾದಿಯ ದಿನದಿಂದ ಹೊಸ ವರ್ಷ ಪ್ರಾರಂಭವಾಗುತ್ತದೆ. ಹಿಂದೂ ಕ್ಯಾಲೆಂಡರ್ ಸಹ ಇಂದಿನಿಂದಲೇ ಶುರುವಾಗುತ್ತದೆ. ಹೊಸ ಪಂಚಾಗ ಸಹ ಇಂದಿನಿಂದಲೇ ಪ್ರಾರಂಭವಾಗುತ್ತದೆ.

ಮಾರ್ಗಶೀರ್ಷ ಮಾಸದ ಹೋಳಿ ಹುಣ್ಣಿಮೆಯಾದ ೧೫ ದಿನಗಳಿಗೆ ಬರುವುದು ಯುಗಾದಿ. ಯುಗ ಎಂದರೆ ಅದೊಂದು ಕಾಲಗಣನೆ. ತ್ರೇತಾಯುಗ, ಕೃತಯುಗ, ದ್ವಾಪರಯುಗ, ಕಲಿಯುಗಗಳಿಗೆ ಯುಇಗವೆಂದರೆ ೫೦೦೦ಕ್ಕೂ ಹೆಚ್ಚಿನ ವರುಷಗಳಂತೆ. ಆದರೆ ಇಲ್ಲಿ ಹಾಗಲ್ಲ. ಕಾಲದ ಒಂದು ಭಾಗ ಮತ್ತೆ ಪ್ರಾರಂಭವಾಗುತ್ತಿದೆ ಎಂಬುದರ ಸೂಚನೆಯಷ್ಟೆ. ವಸಂತ ಋತುವಿನಿಂದ ಪ್ರಾರಂಭಗೊಂಡ ಕಾಲಗಣನೆ ಶಿಶಿರದಲ್ಲಿ ಮುಕ್ತಾಯಗೊಂಡು ಮತ್ತೆ ವಸಂತ ಪ್ರಾರಂಭವಾಗುತ್ತಿರುವುದರ ಸೂಚನೆ. ಇಂತಹ ಯುಗದ ಅಂದರೆ ವರುಷದ ಮೊದಲನೆಯ ದಿನವನ್ನು ಯುಗಾದಿ ಎಂದು ಗುರುತಿಸಿ ಹಬ್ಬವನ್ನಾಗಿ ಆಚರಿಸುವರು.

ಚಾಂದ್ರಮಾನ ಪಂಚಾಂಗ ರೀತ್ಯಾ ಚೈತ್ರ ಮಾಸದ ಶುದ್ಧ ಪಾಡ್ಯದ ದಿನದಂದು ಬ್ರಹ್ಮ ಈ ಲೋಕವನ್ನು ಸೃಷ್ಟಿಸಿದ ಎಂಬ ಪ್ರತೀತಿ ಇದೆ. ಇಂದೇ ಸೂರ್ಯನು ತನ್ನ ಮೊದಲ ಕಿರಣವನ್ನು ಭೂಮಿಯ ಮೇಲೆ ಹರಿಸಿದ ಎಂಬ ಮಾತೂ ಇದೆ. ಇವೆಲ್ಲವೂ ಇಂದು ನಂಬಲಶಕ್ಯ. ಆದರೂ ಮುಂದಿನ ಪೀಳಿಗೆಗೆ ಇದರ ಬಗ್ಗೆ ಸ್ವಲ್ಪವಾದರೂ ತಿಳಿದಿರಲಿ ಎಂದು ಹೇಳಬೇಕಿದೆ. ಇಂದಿನ ದಿನದಿಂದ ಚೈತ್ರ ಮಾಸ ಪ್ರಾರಂಭವಾಗಿ ತರು ಲತೆಗಳು ಚಿಗುರುತ್ತವೆ. ಹೊಸ ಹೊಸ ಹೂಗಳು ಕಂಪನ್ನು ಬೀರುತ್ತವೆ. ಹಳೆಯ ತರಗೆಲೆಗಳು ಉದುರಿ ಗಿಡ ಮರಗಳು ಮತ್ತೆ ಮರಳಿ ಹೊಸ ಚೈತನ್ಯ ಪಡೆಯುತ್ತವೆ. ಜೀವನದಲ್ಲಿ ಒಂದು ವರುಷಗಳಲ್ಲಿ ಕಂಡ ಸುಖ ದು:ಖಗಳನ್ನು ಮರೆತು ಹೊಸ ಬಾಳನ್ನು ಪುಸ್ತಕದ ಹೊಸ ಪುಟದಂತೆ ಪ್ರಾರಂಭಿಸುವ ಸೂಚನೆಯ ಈ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಾರೆ.

ಇಂದಿನ ದಿನ ಶ್ರೀರಾಮನು ರಾವಣನನ್ನು ಜಯಿಸಿ ಮರಳಿ ಅಯೋಧ್ಯೆಗೆ ಬಂದು ರಾಜ್ಯಭಾರ ಮಾಡಿದನೆಂದು ಪ್ರತೀತಿ. ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

[ಬದಲಾಯಿಸಿ] ಹಬ್ಬದ ಆಚರಣೆಯ ವಿಧಾನ

ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ - ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ 'ಗುಡಿ' ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ. ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.

ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.

ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು. ಅಂದಿನ ವಿಶೇಷ ತಿನಿಸು - ಒಬ್ಬಟ್ಟು ಅಥವಾ ಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. ಇದನ್ನೇ ಮರಾಠಿಯಲ್ಲಿ ಪೂರಣಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು. ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು.

ಇನ್ನೊಂದು ವಿಶೇಷವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

[ಬದಲಾಯಿಸಿ] ಬೇವು-ಬೆಲ್ಲ

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ.

ಬೇವು- ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:

ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ| ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ||

ಅದರರ್ಥ ಹೀಗಿದೆ - ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.


aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -